ರಾಜ್ಯಾದ್ಯಂತ ಬುಧವಾರವೂ ಬಿಸಿ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಗುರುವಾರವೂ ಇದು ಮುಂದುವರಿಯಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ರಾಜ್ಯದ 28 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮಧ್ಯಾಹ್ನ 12ರಿಂದ 3ರ ನಡುವೆ ಹೊರಬರಬೇಡಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದ್ದು, ಬಾಯಾರದಿದ್ದರೂ ನೀರು ಕುಡಿಯಿರಿ ಎಂದು ಹೇಳಿದೆ.
ಬೆಂಗಳೂರು: ರಾಜ್ಯಾದ್ಯಂತ ಬುಧವಾರವೂ ಬಿಸಿ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಗುರುವಾರವೂ ಮುಂದುವರಿಯಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ, ರಾಜ್ಯದ 28 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೇಂಜ್ ಅಲರ್ಟ್‌ನ ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ವರದಿಯಾಗಿದೆ. ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ. ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ತೀವ್ರ ಬಿಸಿ ಗಾಳಿ ಕಾಣಿಸಿಕೊಂಡಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.
ಐಎಂಡಿ ಬೆಂಗಳೂರು ಘಟಕವು ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಗುರುವಾರ ರೆಡ್ ಅಲರ್ಟ್ ಘೋಷಿಸಿದ್ದು, ಈ ಜಿಲ್ಲೆಗಳಲ್ಲಿ ತೀವ್ರ ಉಷ್ಣ ಮಾರುತ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
43 ರಿಂದ 46.7 ಡಿಗ್ರಿ ಸೆಂಟಿಗ್ರೇಡ್‌ವರೆಗೆ ಉಷ್ಣತೆ ಏರಿಕೆಯಾಗಿರುವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು 42 ರಿಂದ 43 ಡಿಗ್ರಿ ಸೆಂಟಿಗ್ರೇಡ್‌ವರೆಗೆ ಉಷ್ಣತೆ ಏರಿಕೆಯಾಗಿರುವ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ವಾತಾವರಣದ ಸ್ಥಿತಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉತ್ತರ ಒಳಭಾಗದಲ್ಲಿ ರಾತ್ರಿ ವೇಳೆಯೂ ಬಿಸಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಆದರೆ, ಚಾಮರಾಜನಗರ ಜಿಲ್ಲೆಯ ಕೆಲವೆಡೆ ಮೇ 4ರಂದು ಹಗುರವಾದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕೂಡ ಗರಿಷ್ಠ 39 ಡಿಗ್ರಿ ಸೆಂಟಿಗ್ರೇಡ್‌ನಷ್ಟು ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಈ ನಡುವೆ, ಜನರು ಮಧ್ಯಾಹ್ನ 12 ರಿಂದ 3 ಗಂಟೆ ನಡುವೆ ಬಿಸಿಲಿನಲ್ಲಿ ಹೊರ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಆಗಾಗ್ಗೆ ನೀರು ಕುಡಿಯುವ ಮೂಲಕ ದೇಹ ನಿರ್ಜಲೀಕರಣವಾಗದಂತೆ ಎಚ್ಚರ ವಹಿಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ನಿರ್ವಹಿಸಬಾರದು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ